ಉಡುಪಿ:ಅ. 31: ಹಲ್ಲೆಯಿಂದ ಗಾಯಗೊಂಡು ಚಿಕಿತ್ಸೆಗಾಗಿ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ 28 ವರ್ಷದ ಯುವಕನೊಬ್ಬ ಶುಕ್ರವಾರ ಆಸ್ಪತ್ರೆಯ ಆವರಣದ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತನನ್ನು ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ (28) ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ಪಡಿಗಾರಿನ ಯುವತಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪ್ರದೀಪ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿತ್ತು. ಬಳಿಕ ಆತ ಜೈಲಿನಿಂದ ಬಿಡುಗಡೆಯಾಗಿದ್ದ.
ಜೈಲಿನಿಂದ ಬಿಡುಗಡೆಯಾದ ನಂತರ, ಯುವತಿಯ ಕುಟುಂಬಸ್ಥರು ಮತ್ತು ಸಂಬಂಧಿಕರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರದೀಪ್ ಹಿರಿಯಡ್ಕ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದ ಎನ್ನಲಾಗಿದೆ. ಹಲ್ಲೆ ಕುರಿತು ಆತ ದೂರು ನೀಡಿದ್ದರೂ, ದೂರು ದಾಖಲಾಗಿರಲಿಲ್ಲ ಎಂದು ವರದಿಯಾಗಿದೆ.
ಹಲ್ಲೆಯಿಂದ ಗಾಯಗೊಂಡಿದ್ದ ಪ್ರದೀಪ್ ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ಪಡೆಯುತ್ತಿದ್ದ ವೇಳೆ, ಆಸ್ಪತ್ರೆಯ ಶೌಚಾಲಯದ ಬಳಿಯಿದ್ದ ಕೊಠಡಿಯ ಕಿಟಕಿ ಗ್ರಿಲ್‌ಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಘಟನೆ ನಡೆದ ತಕ್ಷಣ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಭರತೇಶ್ ಮತ್ತು ಮಹೇಶ್ ಪ್ರಸಾದ್ ಹಾಗೂ ಇತರ ಸಿಬ್ಬಂದಿ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಸಮಾಜ ಸೇವಕ ನಿತ್ಯಾನಂದ ಒಳಕಾಡು ಮೃತದೇಹ ಸಾಗಾಟಕ್ಕೆ ನೆರವಾದರು.